ಬಾಗಲಕೋಟೆ ಶಾಸಕ ಹಾಗೂ ಮಾಜಿ ಸಚಿವ ಹೆಚ್.ವೈ. ಮೇಟಿ ನಿಧನ
ಬಾಗಲಕೋಟೆ ಶಾಸಕ ಹಾಗೂ ಮಾಜಿ ಸಚಿವ ಹೆಚ್.ವೈ. ಮೇಟಿ ನಿಧನ
ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಹೆಚ್.ವೈ. ಮೇಟಿ (79) ಇಂದು ಮಂಗಳವಾರ ಬೆಳಿಗ್ಗೆ ನಿಧನರಾದರು. ಅವರು ಕಳೆದ ಕೆಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಬೆಂಗಳೂರಿನ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಇಹಲೋಕ ತ್ಯಜಿಸಿದ್ದಾರೆ.
ಹುಲ್ಲಪ್ಪ ಯಮನಪ್ಪ ಮೇಟಿ ಎಂದೇ ಪರಿಚಿತರಾದ ಹೆಚ್.ವೈ. ಮೇಟಿ, 2023ರ ವಿಧಾನಸಭಾ ಚುನಾವಣೆಯಲ್ಲಿ ಬಾಗಲಕೋಟೆ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ನಲ್ಲಿ ಸ್ಪರ್ಧಿಸಿ, ಬಿಜೆಪಿಯ ವೀರಣ್ಣ ಚರಂತಿಮಠರನ್ನು ಸೋಲಿಸಿದ್ದರು. 2018ರಲ್ಲಿ ಸೋಲು ಕಂಡಿದ್ದರೂ, ರಾಜಕೀಯ ಹೋರಾಟ ಮುಂದುವರಿಸಿಕೊಂಡು ಮತ್ತೆ ಜನರ ವಿಶ್ವಾಸ ಗೆದ್ದಿದ್ದರು.
2013ರಿಂದ 2016ರ ಅವಧಿಯಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಅಬಕಾರಿ ಖಾತೆ ಮಂತ್ರಿಯಾಗಿ ಸೇವೆ ಸಲ್ಲಿಸಿದ್ದ ಮೇಟಿ, ನಂತರ ಲೈಂಗಿಕ ಹಗರಣದ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಬಾಗಲಕೋಟೆ ಜಿಲ್ಲೆಯ ತಿಮ್ಮಾಪುರದಲ್ಲಿ 1946ರ ಅಕ್ಟೋಬರ್ 9ರಂದು ಜನಿಸಿದ ಮೇಟಿ, ತಮ್ಮ ರಾಜಕೀಯ ಜೀವನವನ್ನು ಗ್ರಾಮೀಣ ಪ್ರದೇಶಗಳಿಂದಲೇ ಆರಂಭಿಸಿದ್ದರು. ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಹಾಗೂ ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಕೂಡ ಸೇವೆ ಸಲ್ಲಿಸಿದ್ದರು.
1989ರಲ್ಲಿ ಗುಳೇದಗುಡ್ಡ ಕ್ಷೇತ್ರದಿಂದ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದ ಅವರು, 1994ರಲ್ಲಿ ಜೆಡಿಎಸ್ನಿಂದ ಎರಡನೇ ಬಾರಿ ಗೆದ್ದು ದೇವೇಗೌಡರ ಸಂಪುಟದಲ್ಲಿ ಅರಣ್ಯ ಸಚಿವರಾಗಿದ್ದರು. ನಂತರ 1996ರಲ್ಲಿ ಬಾಗಲಕೋಟೆ ಲೋಕಸಭಾ ಕ್ಷೇತ್ರದ ಸಂಸದರಾಗಿ ಹಾಗೂ 2004ರಲ್ಲಿ ಮತ್ತೆ ಶಾಸಕರಾಗಿ ಆಯ್ಕೆಯಾದರು.
ಇತ್ತೀಚೆಗಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಸ್ಪತ್ರೆಯಲ್ಲಿ ಮೇಟಿ ಅವರ ಆರೋಗ್ಯ ವಿಚಾರಿಸಿದ್ದರು. ಇಂದು ಸಿಎಂ ಸೇರಿ ಕಾಂಗ್ರೆಸ್ ನಾಯಕರು ಅವರ ಪಾರ್ಥಿವ ಶರೀರಕ್ಕೆ ಶ್ರದ್ಧಾಂಜಲಿ ಸಲ್ಲಿಸಿದರು.
ಹೆಚ್.ವೈ. ಮೇಟಿ ಅವರ ಅಂತ್ಯಕ್ರಿಯೆ ನಾಳೆ (ಬುಧವಾರ) ಬಾಗಲಕೋಟೆ ಜಿಲ್ಲೆಯ ತಿಮ್ಮಾಪುರದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಲಿದೆ. ರಾಜ್ಯದ ರಾಜಕೀಯ ವಲಯದಲ್ಲಿ ಮೇಟಿ ಅವರ ನಿಧನವು ಅಪಾರ ಶೋಕವನ್ನು ಉಂಟುಮಾಡಿದೆ.

